14
Aug

ಬೆಂಗಳೂರು, ಆ. 14 : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವುದು ಸ್ವಾಗತಾರ್ಹ ಕ್ರಮ. ಆದರೆ, ಈ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಶಿಕ್ಷಕರ ಹುದ್ದೆಗಳಿಗೆ ಸಮರ್ಪಕ ಪ್ರಾತಿನಿಧ್ಯ ನೀಡದೆ ಉರ್ದು ಶಿಕ್ಷಕರನ್ನು ಕಡೆಗಣಿಸಿರುವುದು ಅತ್ಯಂತ ನಿರಾಶಾದಾಯಕ ಹಾಗೂ ಆತಂಕಕಾರಿ ಸಂಗತಿಯಾಗಿದೆ ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ.

ರಾಜ್ಯದ ವಿವಿಧ ಉರ್ದು ಮಾಧ್ಯಮ ಶಾಲೆಗಳಲ್ಲಿ ಹಲವು ಉರ್ದು ಶಿಕ್ಷಕರ ಹುದ್ದೆಗಳು ದೀರ್ಘಕಾಲದಿಂದ ಖಾಲಿ ಇರುವುದಾಗಿ ತಿಳಿದುಬರುತ್ತಿದೆ. ಉರ್ದು ಮಾಧ್ಯಮದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ನಿರಂತರ ಶಿಕ್ಷಣ ಒದಗಿಸಲು ಅರ್ಹ ಉರ್ದು ಶಿಕ್ಷಕರ ನೇಮಕಾತಿ ಅತ್ಯಂತ ಅಗತ್ಯವಾಗಿದೆ. ಆದರೆ, ಶಿಕ್ಷಕರ ನೇಮಕಾತಿಯಂತಹ ಮಹತ್ವದ ಪ್ರಕ್ರಿಯೆಯಲ್ಲಿ ಉರ್ದು ಶಿಕ್ಷಕರ ಹುದ್ದೆಗಳನ್ನು ಕಡೆಗಣಿಸುವುದು ಉರ್ದು ಮಾಧ್ಯಮ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಎಲ್ಲಾ ಉರ್ದು ಮಾಧ್ಯಮ ಶಾಲೆಗಳಲ್ಲಿ ಖಾಲಿ ಇರುವ ಉರ್ದು ಶಿಕ್ಷಕರ ಹುದ್ದೆಗಳನ್ನು ಜಿಲ್ಲಾವಾರು ಮತ್ತೊಮ್ಮೆ ಸಮಗ್ರವಾಗಿ ಪರಿಶೀಲಿಸಿ, ಖಾಲಿ ಹುದ್ದೆಗಳ ನಿಖರ ಮಾಹಿತಿಯನ್ನು ಸಂಗ್ರಹಿಸಬೇಕು. ಈಗಾಗಲೇ ಹೊರಡಿಸಿರುವ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯನ್ನು ಮರುಪರಿಶೀಲಿಸಿ, ಅರ್ಹ ಉರ್ದು ಶಿಕ್ಷಕರ ನೇಮಕಾತಿಗೆ ಅಗತ್ಯವಿರುವ ಹುದ್ದೆಗಳನ್ನು ಅದರಲ್ಲಿ ಸೇರಿಸಬೇಕು. ಸಾಧ್ಯವಾಗದಿದ್ದಲ್ಲಿ, ಉರ್ದು ಶಿಕ್ಷಕರ ನೇಮಕಾತಿಗಾಗಿ ಪ್ರತ್ಯೇಕ ಅಧಿಸೂಚನೆ ಹೊರಡಿಸಿ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅಪ್ಸ‌ರ್ ಕೊಡ್ಲಿಪೇಟೆ ಆಗ್ರಹಿಸಿದ್ದಾರೆ.

ಉರ್ದು ಭಾಷೆಯಲ್ಲಿ ಹಾಗೂ ಉರ್ದು ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿರುವ ಸಾವಿರಾರು ಅರ್ಹ ಅಭ್ಯರ್ಥಿಗಳು ಉದ್ಯೋಗಾವಕಾಶಕ್ಕಾಗಿ ಕಾಯುತ್ತಿದ್ದಾರೆ. ಇಂತಹ ಅರ್ಹ ಅಭ್ಯರ್ಥಿಗಳಿಗೆ ನ್ಯಾಯಯುತವಾದ ಉದ್ಯೋಗಾವಕಾಶ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಖಾಲಿ ಇರುವ ಉರ್ದು ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದರಿಂದ ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ಉರ್ದು ಶಿಕ್ಷಕರ ಕೊರತೆಯನ್ನು ನಿವಾರಿಸಿ, ಉರ್ದು ಮಾಧ್ಯಮ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಶಿಕ್ಷಕರನ್ನು ಕಡೆಗಣಿಸಿರುವ ಅಂಶವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಖಾಲಿ ಇರುವ ಎಲ್ಲಾ ಉರ್ದು ಶಿಕ್ಷಕರ ಹುದ್ದೆಗಳನ್ನು ಮರುಪರಿಶೀಲಿಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಸೇರಿಸಬೇಕು. ಅಗತ್ಯವಿದ್ದಲ್ಲಿ ಪರಿಷ್ಕೃತ ಅಧಿಸೂಚನೆ ಹೊರಡಿಸುವ ಮೂಲಕ ಅಥವಾ ಪ್ರತ್ಯೇಕ ನೇಮಕಾತಿ ಅಧಿಸೂಚನೆ ಹೊರಡಿಸುವ ಮೂಲಕ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಉರ್ದು ಮಾಧ್ಯಮ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿ, ಅರ್ಹ ಉರ್ದು ಶಿಕ್ಷಕ ಅಭ್ಯರ್ಥಿಗಳ ಭವಿಷ್ಯ ಹಾಗೂ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಸೂಕ್ತ, ನ್ಯಾಯಯುತ ಹಾಗೂ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸ‌ರ್ ಕೊಡ್ಲಿಪೇಟೆ ಆಗ್ರಹಿಸಿದ್ದಾರೆ.

SDPIKarnataka

Leave A Comment